Monday, 30 October 2017

ಜಯ ಭಾರತ ಜನನಿಯ ತನುಜಾತೆ / Jaya bhaarata jananiya tanujaate

ಜಯ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!
ಜಯ ಸುಂದರ ನದಿ ವನಗಳ ನಾಡೇ,
ಜಯ ಹೇ ರಸಋಷಿಗಳ ಬೀಡೆ!

ಭೂದೇವಿಯ ಮಕುಟದ ನವಮಣಿಯೆ,
ಗಂಧದ ಚಂದದ ಹೊನ್ನಿನ ಗಣಿಯೆ;
ರಾಘವ ಮಧುಸೂದನರವತರಿಸಿದ
                                                         ಭಾರತ ಜನನಿಯ ತನುಜಾತೆ..

ಜನನಿಯ ಜೋಗುಳ ವೇದದ ಘೋಷ,
ಜನನಿಗೆ ಜೀವವು ನಿನ್ನಾವೇಶ,
ಹಸುರಿನ ಗಿರಿಗಳ ಸಾಲೇ,
ನಿನ್ನಯ ಕೊರಳಿನ ಮಾಲೆ,
ಕಪಿಲ ಪತಂಜಲ ಗೌತಮ ಜಿನನುತ..
                                                         ಭಾರತ ಜನನಿಯ ತನುಜಾತೆ...

ಶಂಕರ ರಾಮಾನುಜ ವಿದ್ಯಾರಣ್ಯ,
ಬಸವೇಶ್ವರ ಮಧ್ವರ ದಿವ್ಯಾರಣ್ಯ.
ರನ್ನ ಷಡಕ್ಷರಿ ಪೊನ್ನ,
ಪಂಪ ಲಕುಮಿಪತಿ ಜನ್ನ.
ಕಬ್ಬಿಗರುದಿಸಿದ ಮಂಗಳ ಧಾಮ,
ಕವಿ ಕೋಗಿಲೆಗಳ ಪುಣ್ಯಾರಾಮ
ನಾನಕ ರಾಮಾನಂದ ಕಬೀರರ..
                                                         ಭಾರತ ಜನನಿಯ ತನುಜಾತೆ...
ತೈಲಪ ಹೊಯ್ಸಳರಾಳಿದ ನಾಡೇ,
ಡಂಕಣ ಜಕಣರ ನೆಚ್ಚಿನ ಬೀಡೆ
ಕೃಷ್ಣ ಶರಾವತಿ ತುಂಗಾ,
ಕಾವೇರಿಯ ವರ ರಂಗಾ
ಚೈತನ್ಯ ಪರಮಹಂಸ ವಿವೇಕರ...
                                                         ಭಾರತ ಜನನಿಯ ತನುಜಾತೆ...

ಸರ್ವ ಜನಾಂಗದ ಶಾಂತಿಯ ತೋಟ,
ರಸಿಕರ ಕಂಗಳ ಸೆಳೆಯುವ ನೋಟ
ಹಿಂದೂ ಕ್ರೈಸ್ತ ಮುಸಲ್ಮಾನ,
ಪಾರಸಿಕ ಜೈನರುದ್ಯಾನ.
ಜನಕನ ಹೋಲುವ ದೊರೆಗಳ ಧಾಮ,
ಗಾಯಕ ವೈಣಿಕರಾರಾಮ
ಕನ್ನಡ ನುಡಿ ಕುಣಿದಾಡುವ ಗೇಹ,
ಕನ್ನಡ ತಾಯಿಯ ಮಕ್ಕಳ ದೇಹ...
                                                         ಭಾರತ ಜನನಿಯ ತನುಜಾತೆ...


                                                                                                         - ಕುವೆಂಪು

No comments:

Post a Comment